ರೈತರು ಸುಮಾರು 15 ವರ್ಷಗಳ ಕಾಲ ಕಷ್ಟಪಟ್ಟು ಬೆಳೆಸಿದ್ದ ಫಸಲು ನೀಡುವ ಅಡಿಕೆ ಮರಗಳನ್ನು ಅಧಿಕಾರಿಗಳು ಏಕಾಏಕಿ ತೆರವುಗೊಳಿಸಿರುವ ಘಟನೆಗೆ ಸಂಸದ ಬಿ.ವೈ. ರಾಘವೇಂದ್ರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ರೈತ ವಿರೋಧಿ ನೀತಿಗಳ ವಿರುದ್ಧ ಕಿಡಿಕಾರಿದ್ದಾರೆ.

ಸೊರಬ ತಾಲೂಕಿನ ಆನವಟ್ಟಿ ಹೋಬಳಿಯ ತೇವರತೆಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರೈತರು ವರ್ಷಗಳ ಕಾಲ ಶ್ರಮಪಟ್ಟು ಬೆಳೆಸಿದ್ದ ಅಡಿಕೆ ಮರಗಳನ್ನು ಯಾವುದೇ ಪೂರ್ವ ನೋಟಿಸ್ ನೀಡದೆ ಅಧಿಕಾರಿಗಳು ಕಡಿದು ಹಾಕಿದ್ದಾರೆ. ಇದರಿಂದ ರೈತ ಕುಟುಂಬಗಳಿಗೆ ಭಾರೀ ಆರ್ಥಿಕ ನಷ್ಟ ಉಂಟಾಗಿದ್ದು, ಅವರ ಜೀವನೋಪಾಯಕ್ಕೆ ದೊಡ್ಡ ಹೊಡೆತ ಬಿದ್ದಿದೆ.
ಈ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಸಂಸದ ಬಿ.ವೈ. ರಾಘವೇಂದ್ರ, ರೈತರ ಬೆವರಿನ ಫಲವಾಗಿ ಬೆಳೆದು ನಿಂತಿದ್ದ ಅಡಿಕೆ ಮರಗಳನ್ನು ತೆರವುಗೊಳಿಸಿರುವುದು ಅತ್ಯಂತ ನೋವಿನ ಸಂಗತಿ. ಸುಮಾರು 15 ವರ್ಷಗಳ ಪರಿಶ್ರಮದ ನಂತರ ಫಸಲು ನೀಡುತ್ತಿದ್ದ ಮರಗಳನ್ನು ಕಡಿದು ಹಾಕಿರುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಬಿಜೆಪಿ ಸೊರಬ ಮಂಡಲದ ವತಿಯಿಂದ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ರೈತರಿಗೆ ಬೆಂಬಲ ಸೂಚಿಸಿದ ಅವರು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರಕರಣದ ಕುರಿತು ನಿಷ್ಪಕ್ಷಪಾತ ಉನ್ನತ ಮಟ್ಟದ ತನಿಖೆ ನಡೆಸಬೇಕು. ರೈತರಿಗೆ ಉಂಟಾಗಿರುವ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವುದರ ಜೊತೆಗೆ ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.
ರೈತರ ಪರಿಶ್ರಮಕ್ಕೆ ಬೆಲೆ ಸಿಗಬೇಕು. ಅವರ ಬದುಕು ಮತ್ತು ಜೀವನೋಪಾಯದ ರಕ್ಷಣೆಗೆ ನಮ್ಮ ಬದ್ಧತೆ ಸದಾ ಇರಲಿದೆ ಎಂದು ರಾಘವೇಂದ್ರ ಭರವಸೆ ನೀಡಿದರು. ಪ್ರತಿಭಟನೆಯಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಹರತಾಳು ಹಾಲಪ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷ ಜಗದೀಶ್, ತಾಲೂಕು ಅಧ್ಯಕ್ಷ ಪ್ರಕಾಶ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ರೈತರು ಉಪಸ್ಥಿತರಿದ್ದರು.