ಇಂದು ದೆಹಲಿಯಲ್ಲಿ ಸಿಡಬ್ಲ್ಯೂಆರ್ ಸಿ ಮುಖ್ಯಸ್ಥ ವಿನೀತ್ ಗುಪ್ತಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ಆದೇಶದಿಂದಾಗಿ ಕರ್ನಾಟಕವು ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ನಿತ್ಯ 3 ಸಾವಿರ ಕ್ಯೂಸೆಕ್ ನೀರು ಹರಿಸಬೇಕಾಗಿದೆ. ಈಗಾಗಲೇ ನೀರಿನ ಬರದಿಂದ ಕಂಗೆಟ್ಟಿರುವ ಕರ್ನಾಟಕಕ್ಕೆ ಗಾಯದ ಮೇಲೆ ಬರೆ ಎಳೆದಿದೆ. ಇದಕ್ಕೂ ಮೊದಲ ತಮಿಳುನಾಡಿಗೆ ಪ್ರತಿದಿನ 4 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ CWMA ಆದೇಶ ನೀಡಿತ್ತು. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಕರ್ನಾಟಕ ನೀರಿನ ಪ್ರಮಾಣವನ್ನು 2 ಸಾವಿರ ಕ್ಯೂಸೆಕ್ಗೆ ಇಳಿಸುವಂತೆ ಮನವಿ ಮಾಡಿತ್ತು. ಇದನ್ನು ಪುರಸ್ಕರಿಸದ ಕಾವೇರಿ ನೀರಿು ನಿಯಂತ್ರಣ ಸಮಿತಿ ನಿತ್ಯ 3 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶಿಸಿದೆ.

ಪ್ರಸ್ತುತ ಕಾವೇರಿ ಜಲಾಶಯಗಳಿಗೆ ಒಳಹರಿವು ತೀವ್ರವಾಗಿ ಕ್ಷೀಣಿಸಿದೆ. ಕೆಆರ್ ಎಸ್ ಸೇರಿದಂತೆ ಕಾವೇರಿ ಕೊಳ್ಳದ ಪ್ರಮುಖ 4 ಜಲಾಶಯಗಳಲ್ಲಿ ಲಭ್ಯವಿರುವ ನೀರು ಕಡಿಮೆ ಇದ್ದು ಕೇವಲ 49 ಟಿಎಂಸಿ ಮಾತ್ರ ಇದೆ. ಈ ನೀರನ್ನು ಮುಂದಿನ ಜೂನ್ವರೆಗೆ ಕುಡಿಯಲು ಕಾಯ್ದಿರಿಸುವುದು ಅನಿವಾರ್ಯವಾಗಿದೆ ಎಂದು ಕರ್ನಾಟಕ ಸರ್ಕಾರ ತನ್ನ ಮನವಿಯಲ್ಲಿ ತಿಳಿಸಿತ್ತು.

ಈಗಾಗಲೇ ಕಾವೇರಿ ಕಣಿವೆಯ 47 ತಾಲೂಕುಗಳನ್ನು ತೀವ್ರ ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಮತ್ತೆ ಕೆಆರ್ಎಸ್ ಮತ್ತು ಕಬಿನಿ ಜಲಾಶಯಗಳಿಂದ ಗಣನೀಯ ನೀರು ಬಿಡುಗಡೆ ಮಾಡಲು ಸಾಧ್ಯವಿಲ್ಲ. ತಮಿಳುನಾಡಿನಲ್ಲಿ ಈಶಾನ್ಯ ಮಾನ್ಸೂನ್ ಉತ್ತಮವಾಗಿರುವ ಭರವಸೆ ಇರುವ ಕಾರಣ ಬಿಳಿಗುಂಡ್ಲುವಿನಲ್ಲಿ ಹರಿಸಬೇಕಾದ ನೀರಿನ ಪ್ರಮಾಣವನ್ನು ಇಳಿಸಿ ಎಂದು ಕರ್ನಾಟಕ ಮನವಿ ಮಾಡಿತ್ತು. ಆದರೆ ಇದ್ಯಾವುದನ್ನೂ ಪರಿಗಣನೆಗೆ ತೆಗೆದುಕೊಳ್ಳದ ಕಾವೇರಿ ನೀರು ನಿಯಂತ್ರಣ ಸಮಿತಿ ಪ್ರತಿ ದಿನ ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸೂಚಿಸಿದೆ. ಇದು ಮೊದಲೇ ಬರದಿಂದ ತತ್ತರಿಸಿಹೋಗಿರುವ ರಾಜ್ಯವನ್ನು ಮತ್ತಷ್ಟು ಸಂಕಷ್ಟಕ್ಕೀಡಾಗುವಂತೆ ಮಾಡಿದೆ.