ಬಿಹಾರದಲ್ಲಿ ನಡೆದ ಮಹಿಳೆಯರ ಮೇಲಿನ ದೌರ್ಜನ್ಯ ದೇಶವನ್ನೇ ಬೆಚ್ಚಿ ಬೀಳಿಸಿದೆ. ಅಲ್ಲಿನ ಆಡಳಿತ ಕಾನೂನು ಸುವ್ಯವಸ್ಥೆಯ ಬಗ್ಗೆ ಅನೇಕ ಚರ್ಚೆಗಳು ನಡೆಯುತ್ತಿವೆ. ಪ್ರಶ್ನೆಗಳು ಎದ್ದಿವೆ. ಈ ಘಟನೆಗಳನ್ನು  ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಕೂಡಾ ತೀವ್ರವಾಗಿ ಖಂಡಿಸಿದ್ದಾರೆ.ಕೇಂದ್ರ ಮತ್ತು ಬಿಹಾರದಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ ಸರ್ಕಾರದ ಭಾಗವಾಗಿದ್ದರೂ ಚಿರಾಗ್ ಪಾಸ್ವಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬಿಹಾರದಲ್ಲಿ ದಿನದಿಂದ ದಿನಕ್ಕೆ ಕಾನೂನು ಸುವ್ಯವಸ್ಥೆ ಹದಗೆಡುತ್ತಿರು ಬಗ್ಗೆ ಪ್ರಶ್ನೆ ಎತ್ತಿದ್ದಾರೆ. ಅಪರಾಧಗಳು ಹದ್ದುಮೀರಿ ಹೋಗಿರುವ ಈ ಸರ್ಕಾರಕ್ಕೆ ಬೆಂಬಲ ನೀಡಿದ್ದಕ್ಕೆ ತಮಗೆ ನಾಚಿಕೆಯಾಗುತ್ತಿದೆ ಎಂದು ಕಿಡಿ ಕಾರಿದ್ದಾರೆ. ಕೂಡಲೇ ಸರ್ಕಾರ ಅಪರಾಧಗಳನ್ನು ಮಟ್ಟ ಹಾಕಿ ಕಾನೂನು ಸುವ್ಯವಸ್ಥೆಯನ್ನು ಮರು ಸ್ಥಾಪಿಸಬೇಕು ಎಂದು ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಪೊಲೀಸ್ ಮತ್ತು ಸರ್ಕಾರದ ಆಡಳಿತ ಯಂತ್ರ ಸಂಪೂರ್ಣವಾಗಿ ನಿಷ್ಕ್ರಿಯಗೊಂಡಿದೆ ಎಂದಿರುವ ಪಾಸ್ವಾನ್ ರಾಜ್ಯದ ಜನರನ್ನು ಸುರಕ್ಷಿತವಾಗಿಡುವುದು ಈಗ ಸರ್ಕಾರದ ಸಾಮರ್ಥ್ಯಕ್ಕೆ ಮೀರಿದ ಮಾತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಪರಿಸ್ಥಿತಿ ಹೀಗೆ ಮುಂದುವರೆದರೆ ಪರಿಸ್ಥಿತಿ ಕೈ ಮೀರಿ ಹೋಗುವುದರಲ್ಲಿ ಸಂದೇಹವಿಲ್ಲ. ಅದಕ್ಕೂ ಮೊದಲೇ ಇಂಥವುಗಳಿಗೆ ಕಡಿವಾಣ ಹಾಕಲು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಚಿರಾಗ್ ಪಾಸ್ವಾನ್ ಒತ್ತಾಯಿಸಿದ್ದಾರೆ. ಇಲ್ಲದಿದ್ದರೆ, ಬಿಹಾರ ಮತ್ತು ಅಲ್ಲಿನ ಜನರ ಜೀವದ ಜೊತೆ ಈ ರೀತಿ ಚೆಲ್ಲಾಟವಾಡುವುದು ರಾಜ್ಯವನ್ನು ತೀರಾ ಕೆಟ್ಟ ಪರಿಣಾಮದತ್ತ ಕೊಂಡೊಯ್ಯಬಹುದು ಎಂದು ಚಿರಾಗ್ ಪಾಸ್ವಾನ್ ಸರ್ಕಾರವನ್ನು ಎಚ್ಚರಿಸಿದರು.