ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೆ ತೀವ್ರಗೊಂಡಿದೆ. ಅಕ್ಟೋಬರ್ 23ರಿಂದ ಕರ್ನಾಟಕ ಕಾವೇರಿ ನದಿ ನೀರನ್ನು ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿರುವ ತಮಿಳುನಾಡು ಸರ್ಕಾರ, ಈ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಸುಪ್ರೀಂ ಕೋರ್ಟ್‌ಗೆ ತುರ್ತು ಮನವಿ ಸಲ್ಲಿಸಿದೆ.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಪ್ರತಿದಿನ 3,000 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಸೂಚನೆ ನೀಡಿದ್ದರೂ, ರಾಜ್ಯ ಸರ್ಕಾರ ನೀರು ಹರಿಸಿಲ್ಲ ಎಂಬುದು ತಮಿಳುನಾಡಿನ ಆರೋಪವಾಗಿದೆ. ಇದರಿಂದ ಕೃಷಿ ಚಟುವಟಿಕೆಗಳಿಗೆ ತೀವ್ರ ಹಿನ್ನಡೆಯಾಗಿದ್ದು, ಸುಮಾರು ನಾಲ್ಕು ಲಕ್ಷ ಹೆಕ್ಟೇರ್ ಕೃಷಿ ಭೂಮಿಗೆ ನೀರಿನ ಕೊರತೆಯ ಆತಂಕ ಎದುರಾಗಿದೆ ಎಂದು ತಮಿಳುನಾಡು ನ್ಯಾಯಾಲಯದ ಗಮನಕ್ಕೆ ತಂದಿದೆ.

'ನಾವೀಗ ಎಲ್ಲಿಗೆ ಹೋಗಬೇಕು?' ಎಂದು ಪ್ರಶ್ನಿಸಿದ ತಮಿಳುನಾಡು

ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದ ಮುಂದೆ ತಮಿಳುನಾಡು ಸರ್ಕಾರದ ಪರ ವಕೀಲ ಬಿ. ಕರುಣಾಕರನ್ ವಾದ ಮಂಡಿಸಿದ್ದಾರೆ. ಕಾವೇರಿ ನ್ಯಾಯಮಂಡಳಿ ನೀಡಿರುವ ನೀರು ಹಂಚಿಕೆ ಆದೇಶಗಳನ್ನು ಕರ್ನಾಟಕ ನಿರಂತರವಾಗಿ ಉಲ್ಲಂಘಿಸುತ್ತಿದೆ ಎಂದು ಆರೋಪಿಸಿದ್ದಾರೆ. ಜಲಾಶಯಗಳಲ್ಲಿ ಪ್ರವಾಹದ ಸಂದರ್ಭದಲ್ಲಿ ಹೆಚ್ಚುವರಿ ನೀರು ಸಂಗ್ರಹವಾದಾಗ ಮಾತ್ರ ಕರ್ನಾಟಕ ನೀರು ಬಿಡುಗಡೆ ಮಾಡುತ್ತಿದೆ ಎಂದು ದೂರಿದ್ದಾರೆ.

ನೀರು ಬಿಡುಗಡೆ ವಿಳಂಬವಾದರೆ ಬೆಳೆ ಬೆಳೆಯಬೇಕಿರುವ ನಾಲ್ಕು ಲಕ್ಷ ಹೆಕ್ಟೇರ್ ಕೃಷಿ ಭೂಮಿ ನಾಶವಾಗುವ ಅಪಾಯವಿದೆ. ರೈತರ ಹಿತಾಸಕ್ತಿ ಕಾಪಾಡಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ತಮಿಳುನಾಡು ಪರ ವಕೀಲರು ಒತ್ತಾಯಿಸಿದ್ದಾರೆ.

ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು

ತಮಿಳುನಾಡು ಸಲ್ಲಿಸಿರುವ ತುರ್ತು ಮನವಿಯನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿದ್ದು, ಪ್ರಕರಣವನ್ನು ಶೀಘ್ರದಲ್ಲೇ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ. ಈ ಬೆಳವಣಿಗೆಯಿಂದ ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ರಾಜಕೀಯ ಹಾಗೂ ಕಾನೂನು ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.