ನಂದಿನಿ ಹಾಲು ಮತ್ತು ಮೊಸರಿನ ಇತ್ತೀಚಿನ ದರ ಏರಿಕೆ ವಿರುದ್ಧ ರಾಜ್ಯಾದ್ಯಂತ ತೀವ್ರ ಜನಾಕ್ರೋಶ ವ್ಯಕ್ತವಾದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಬೆಲೆ ಇಳಿಕೆಗೆ ಮುಂದಾಗಿದೆ. ಸಾರ್ವಜನಿಕರ ಮೇಲಿನ ಆರ್ಥಿಕ ಹೊರೆಯನ್ನು ತಗ್ಗಿಸುವ ನಿಟ್ಟಿನಲ್ಲಿ ನಂದಿನಿ ಮೊಸರಿನ ದರವನ್ನು ಸ್ವಲ್ಪ ಮಟ್ಟಿಗೆ ಕಡಿತಗೊಳಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು KMF ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ದೈನಂದಿನ ಬಳಕೆಯ ಅತ್ಯಗತ್ಯ ವಸ್ತುಗಳಾದ ಹಾಲು ಮತ್ತು ಮೊಸರಿನ ಬೆಲೆ ಏರಿಕೆಯು ಸಾರ್ವಜನಿಕರಲ್ಲಿ ತೀವ್ರ ಅಸಮಾಧಾನ ಮೂಡಿಸಿತ್ತು. ಸಾಮಾಜಿಕ ಜಾಲತಾಣಗಳು ಸೇರಿದಂತೆ ವಿವಿಧೆಡೆ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದ್ದರಿಂದ, ಬೆಲೆ ಇಳಿಸುವಂತೆ ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಿತ್ತು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, "ಹಾಲು ಮತ್ತು ಮೊಸರು ಸಾಮಾನ್ಯ ಜನರ ದಿನಬಳಕೆಯ ಅಗತ್ಯ ವಸ್ತುಗಳಾಗಿವೆ. ಇತ್ತೀಚಿನ ದರ ಏರಿಕೆಯಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಮೊಸರಿನ ಬೆಲೆಯನ್ನು ಸ್ವಲ್ಪ ಮಟ್ಟಿಗೆ ಕಡಿಮೆ ಮಾಡುವಂತೆ ನಿರ್ದೇಶನ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಹಾಲಿನ ದರದಲ್ಲಿ ಯಾವುದೇ ಬದಲಾವಣೆ ಮಾಡುವ ಪ್ರಸ್ತಾಪವಿಲ್ಲ. ಆದರೆ ನಂದಿನಿ ಮೊಸರಿನ ಬೆಲೆಯನ್ನು ಸ್ವಲ್ಪ ಇಳಿಸುವ ಕುರಿತು ಸರ್ಕಾರ ಚಿಂತನೆ ನಡೆಸಿದೆ. ಈ ನಿಟ್ಟಿನಲ್ಲಿ ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದರೊಂದಿಗೆ ಲೀಟರ್ ಮೊಸರಿಗೆ 14 ರೂ. ಹೆಚ್ಚಿಸಿದ್ದನ್ನು 12 ರೂ.ಗೆ ಇಳಿಕೆ ಮಾಡಲಾಗುತ್ತಿದೆ.