ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇದರಿಂದ ಕೆಪಿಎಸ್‌ ಸಿ ಯನ್ನೇ ಮುಚ್ಚಲು ಚಿಂತನೆ ನಡೆಸುತ್ತಿರುವುದಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿನ್ನೆ ಹೇಳಿದ್ದಾರೆ. ಸಿಎಂ ಕೊಟ್ಟಿರುವ ಈ ಹೇಳಿಕೆಗೆ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಹರಿಹಾಯ್ದಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕುಮಾರಸ್ವಾಮಿ ಕರ್ನಾಟಕ ಲೋಕಸೇವಾ ಆಯೋಗವನ್ನು ಶಾಸನಬದ್ಧವಾಗಿ ಮುಚ್ಚುತ್ತೇವೆ ಎನ್ನುವುದು ಮುಖ್ಯಮಂತ್ರಿಗಳ ಹತಾಶೆಯನ್ನು ತೋರಿಸುತ್ತದೆ ಎಂದಿದ್ದಾರೆ. ಅದು ಅವರ ಬುದ್ಧಿಗೇಡಿತನ ಹೊಣೆಗೇಡಿತನ ಹಾಗೂ ಅಜ್ಞಾನದ ಪರಾಮವಧಿ ಎಂದು ಟೀಕಿಸಿದ್ದಾರೆ.

ಕರ್ನಾಟಕ ಲೋಕಸೇವಾ ಆಯೋಗ ಸರಿಯಾಗೇ ಇದೆ. ಆದರೆ ಅಲ್ಲಿಗೆ ಕೆಟ್ಟವರು ಬಂದು ಕುಳಿತಿದ್ದಾರೆ. ಜೊತೆಗೆ ಬೇಲಿಯೇ ಎದ್ದು ಹೊಲ ಮೇಯುತ್ತಿದೆ. ಅಷ್ಟಕ್ಕೂ ಅಲ್ಲಿಗೆ ಖದೀಮರನ್ನು ತಂದು ಕೂರಿಸಿದ್ದು ಯಾರು.?ವಸೂಲಿಗೆ ಅಂಗಡಿ ತೆರೆಯಲು ಅವಕಾಶ ಕೊಟ್ಟಿದ್ದು ಯಾರು? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಇದು ವಿಧಾನಸೌಧದ 3ನೇ ಮಹಡಿಯಲ್ಲಿ ಕೂತವರೇ ಎಸಗಿದ ಪಾಪವಲ್ಲವೇ.? ಆ ಲೆಕ್ಕಕ್ಕೆ ಬಂದರೆ ವಿಧಾನಸೌಧವನ್ನೇ ಮುಚ್ಚಬೇಕು.ನಿಮ್ಮ ಸಾರಥ್ಯದಲ್ಲಿ ಅದೂ ನಡೆದುಹೋಗಲಿ ಎಂದು ಟಾಂಟ್ ನೀಡಿದ್ದಾರೆ.

ಬೇಜವಾಬ್ದಾರಿಯಿಂದ ಚಪಲಕ್ಕೆ ನಾಲಿಗೆ ಜಾರುವ ಮೊದಲು ಕೆಪಿಎಸ್ಸಿ ಎಂದರೆ ಏನು? ಅದರ ಸಂರಚನೆ, ಸ್ವರೂಪ ಹೇಗಿರುತ್ತದೆ? ಸಾಂವಿಧಾನಿಕವಾಗಿ ಅದಕ್ಕಿರುವ ರಕ್ಷಣೆ ಏನು? ಆ ಸಂಸ್ಥೆ ನಡೆದುಬಂದ ಹಾದಿ, ಹೆಗ್ಗಳಿಕೆ ಬಗ್ಗೆ ತಿಳಿದುಕೊಳ್ಳಿ. ಹೊಲಕ್ಕೆ ಕಳೆ ಬಿದ್ದರೆ ಅದನ್ನು ಕಿತ್ತೆಸೆಯಬೇಕು, ಹೊಲಕ್ಕೇ ವಿಷವುಣಿಸುವ ಕೆಲಸ ಆಗಬಾರದು ಎಂದು ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.