ರಾಜ್ಯದ ಖಾಸಗಿ ಕಂಪನಿಗಳು ಹಾಗೂ ಐಟಿ-ಬಿಟಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಬೇಕು ಎಂಬ ಕೂಗು ಮತ್ತೆ ಜೋರಾಗಿದೆ. ಈ ವಿಚಾರವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಾಸಗಿ ಕಂಪನಿಗಳಿಗೆ ಮಹತ್ವದ ಸಂದೇಶ ನೀಡಿದ್ದು, ಕನ್ನಡಿಗರಿಗೆ ನ್ಯಾಯಯುತ ಉದ್ಯೋಗಾವಕಾಶಗಳನ್ನು ಒದಗಿಸುವಂತೆ ಒತ್ತಾಯಿಸಿದ್ದಾರೆ. ಕನ್ನಡ ಭಾಷೆ ಮತ್ತು ಸ್ಥಳೀಯ ಪ್ರತಿಭೆಗಳಿಗೆ ನೇಮಕಾತಿಯಲ್ಲಿ ಆದ್ಯತೆ ನೀಡಬೇಕು ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಪ್ರತಿಭಾವಂತ ಕನ್ನಡಿಗರಿಗೆ ಯಾವುದೇ ಕೊರತೆಯಿಲ್ಲ. ಹೀಗಾಗಿ ಸ್ಥಳೀಯ ಯುವಜನರಿಗೆ ಅವರ ಅರ್ಹತೆಗೆ ತಕ್ಕ ಉದ್ಯೋಗಾವಕಾಶಗಳನ್ನು ಕಲ್ಪಿಸಬೇಕು ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕೌಶಲ್ಯ ಆಧಾರಿತ ನೇಮಕಾತಿ ಪ್ರಕ್ರಿಯೆಯಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ. ಆದರೆ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಗಮನಾರ್ಹ ಪಾಲು ಸಿಗಬೇಕು ಎಂಬುದು ಸರ್ಕಾರದ ಆಶಯವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಕನ್ನಡದ ಹೆಸರಿನಲ್ಲಿ ಯಾರೂ ತಮ್ಮ ಹುದ್ದೆಯನ್ನು ದುರುಪಯೋಗಪಡಿಸಿಕೊಳ್ಳುವುದು, ಬೆದರಿಕೆ ಹಾಕುವುದು ಅಥವಾ ನೈತಿಕ ಪೊಲೀಸ್‌ಗಿರಿ ನಡೆಸುವುದನ್ನು ಸರ್ಕಾರ ಸಹಿಸುವುದಿಲ್ಲ. ಅದೇ ರೀತಿ ಖಾಸಗಿ ಕಂಪನಿಗಳಿಗೂ ಸಾಮಾಜಿಕ ಜವಾಬ್ದಾರಿ ಇದೆ. ಕನ್ನಡಿಗರಿಗೆ ಸೂಕ್ತ ಅವಕಾಶಗಳನ್ನು ನೀಡುವ ಮೂಲಕ ಸ್ಥಳೀಯ ಪ್ರತಿಭೆಗಳನ್ನು ಪ್ರೋತ್ಸಾಹಿಸಬೇಕು ಎಂದು ಕರೆ ನೀಡಿದ್ದಾರೆ.

ಅದೇನೇ ಇರಲಿ, ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ಕಲ್ಪಿಸುವ ವಿಚಾರ ಮತ್ತೆ ಚರ್ಚೆಗೆ ಬಂದಿದ್ದು, ಸರ್ಕಾರದ ನಿಲುವು ಮತ್ತು ಕರವೇ ಅಭಿಯಾನದ ಮುಂದಿನ ಬೆಳವಣಿಗೆಗಳತ್ತ ಎಲ್ಲರ ಗಮನ ನೆಟ್ಟಿದೆ.