ದೆಹಲಿಯ ಜಂತರ್ ಮಂತರ್ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇವತ್ತು ಪ್ರತಿಭಟನೆ ಹಮ್ಮಿಕೊಂಡಿದೆ. ಇದರ ಬೆನ್ನಲ್ಲೇ, ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಗೃಹ ಸಚಿವಾಲಯ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಮಹತ್ವದ ಮುನ್ನೆಚ್ಚರಿಕೆ ನಿರ್ದೇಶನ ನೀಡಿದೆ. ಕೇಂದ್ರ ಗೃಹ ಇಲಾಖೆಯ ಕಾರ್ಯದರ್ಶಿ ಗೋವಿಂದ್ ಮೋಹನ್ ಎಲ್ಲಾ ರಾಜ್ಯಗಳ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದು, ಸಿಜೆಪಿ ಪ್ರತಿಭಟನಾಕಾರರು ಹೆಚ್ಚಿನ ಸಂಖ್ಯೆಯಲ್ಲಿ ರಾಜಧಾನಿ ದೆಹಲಿಯತ್ತ ಜಮಾಯಿಸದಂತೆ ತಡೆಯಲು ಆಯಾ ರಾಜ್ಯಗಳಲ್ಲೇ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.
ನಿಗದಿತ ಕಾರ್ಯವಿಧಾನಗಳನ್ನು ಪಾಲಿಸದಿರುವುದು ಹಾಗೂ ಜಂತರ್ ಮಂತರ್ ಪ್ರದೇಶದಲ್ಲಿ ಸಭೆಗಳನ್ನು ನಡೆಸುವುದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ 23.07.2018ರಂದು W.P. (C) No. 1153 of 2017 ಪ್ರಕರಣದಲ್ಲಿ ನೀಡಿರುವ ಕಡ್ಡಾಯ ನಿರ್ದೇಶನಗಳನ್ನು ಪಾಲಿಸುವ ಅಗತ್ಯದ ಹಿನ್ನೆಲೆಯಲ್ಲಿ ಅನುಮತಿ ನಿರಾಕರಿಸಲಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಅಲ್ಲದೇ ಕಾನೂನು ಬದ್ಧ ನಿರ್ದೇಶನಗಳನ್ನು ಪಾಲಿಸದಿರುವ ಸಿಜೆಪಿ ಹಾಗೂ ಅದಕ್ಕೆ ಬೆಂಬಲ ನೀಡುವ ಪಕ್ಷಗಳು, ಸಂಘಟನೆಗಳು ಮತ್ತು ವ್ಯಕ್ತಿಗಳ ಹಿಂದಿನ ನಡವಳಿಕೆಯ ದಾಖಲೆಗಳನ್ನೂ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.
ದೆಹಲಿಯಲ್ಲಿ ಪ್ರತಿಭಟನೆ ನಡೆಸಲು ಅಧಿಕೃತವಾಗಿ ಅನುಮತಿ ನಿರಾಕರಿಸಲಾಗಿದೆ. ಆದರೂ ಕಾಕ್ರೋಚ್ ಜನತಾ ಪಾರ್ಟಿ ಹಾಗೂ ಅದರ ಬೆಂಬಲಿಗರು ಕಾನೂನುಬದ್ಧ ಆದೇಶಗಳನ್ನು ಗಾಳಿಗೆ ತೂರಿ ರಾಜಧಾನಿ ಪ್ರವೇಶಿಸಲು ಸಂಚು ರೂಪಿಸಿದ್ದಾರೆ ಎಂಬ ವಿಚಾರ ತಿಳಿದು ಬಂದಿದೆ. ದೇಶದ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಸಿಜೆಪಿ ಕಾರ್ಯಕರ್ತರು ಯಾವುದೇ ಪೂರ್ವಾನುಮತಿ ಇಲ್ಲದೆ ದೆಹಲಿಗೆ ನುಗ್ಗಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ಗುಪ್ತಚರ ಸಂಸ್ಥೆಗಳು ಮಾಹಿತಿ ನೀಡಿವೆ. ಗೃಹ ಇಲಾಖೆ ಪತ್ರದಲ್ಲಿ ತಿಳಿಸಿದೆ. ಅಲ್ಲದೇ ಪ್ರತಿಭಟನಾಕಾರರು ಕಾನೂನು ಸುವ್ಯವಸ್ಥೆಯನ್ನು ಕೈಗೆತ್ತಿಕೊಳ್ಳುವ ಮೂಲಕ ಸಾರ್ವಜನಿಕ ಶಾಂತಿ ಮತ್ತು ನೆಮ್ಮದಿಗೆ ಭಂಗ ಉಂಟುಮಾಡುವ ಗಂಭೀರ ಸಾಧ್ಯತೆಯಿದೆ ಎಂದು ಗೃಹ ಸಚಿವಾಲಯ ಕಳವಳ ವ್ಯಕ್ತಪಡಿಸಿದೆ.
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಗುಪ್ತಚರ ಸಂಸ್ಥೆಗಳು, ಗಡಿ ಹಾಗೂ ಸಾರಿಗೆ ಪ್ರಾಧಿಕಾರಗಳು ಮತ್ತು ದೆಹಲಿ ಪೊಲೀಸರ ನಡುವೆ ನಿರಂತರವಾಗಿ, ನೈಜ ಸಮಯದಲ್ಲಿ ಗುಪ್ತಚರ ಮಾಹಿತಿಯನ್ನು ಹಂಚಿಕೊಳ್ಳುವಂತೆಯೂ ಗೃಹ ಸಚಿವಾಲಯ ಸೂಚಿಸಿದೆ. ಇದರಿಂದ ಎಲ್ಲ ಇಲಾಖೆಗಳು ಸಮನ್ವಯದೊಂದಿಗೆ ಕ್ರಮ ಕೈಗೊಳ್ಳಲು ಸಾಧ್ಯವಾಗಲಿದೆ ಎಂದು ತಿಳಿಸಿದೆ.
ಇದಲ್ಲದೇ ಪ್ರತಿಭಟನೆಗೆ ಸಂಬಂಧಿಸಿದಂತೆ ಯೋಜಿಸಲಾಗಿರುವ ಅಥವಾ ಈಗಾಗಲೇ ನಡೆಸಿರುವ ಪೂರ್ವಸಿದ್ಧತಾ ಸಭೆಗಳು, ಪ್ರತಿಭಟನೆಗಳು, ಸಾಮಾಜಿಕ ಮಾಧ್ಯಮ ಅಭಿಯಾನಗಳು, ನಿಧಿ ಸಂಗ್ರಹಣೆ, ಜನಸಂಘಟನೆ ಹಾಗೂ ಇತರ ಚಟುವಟಿಕೆಗಳ ವಿವರಗಳನ್ನೂ ಪೊಲೀಸರು ಕೇಳಿದ್ದಾರೆ. ಪ್ರಭಾವಿ ವ್ಯಕ್ತಿಗಳು, ಕಾರ್ಯಕರ್ತರು, ವಿದ್ಯಾರ್ಥಿ ಮತ್ತು ಯುವಜನ ಮುಖಂಡರು, ಸಾಮಾಜಿಕ ಮಾಧ್ಯಮ ಪ್ರಭಾವಿಗಳು, ಸಾರ್ವಜನಿಕ ವ್ಯಕ್ತಿಗಳು ಹಾಗೂ ಇತರ ಪ್ರಮುಖರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಯ ಬಗ್ಗೆಯೂ ಮಾಹಿತಿ ನೀಡುವಂತೆ ಸೂಚಿಸಲಾಗಿದೆ. ಇಷ್ಟಿದ್ದರೂ ಸಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿಯೇ ಮಾಡುವುದಾಗಿ ಸವಾಲು ಹಾಕಿದ್ದಾರೆ.