ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗುರುವಾರ ಹಾಸನಾಂಬ ದೇವಿಯ ಗರ್ಭಗುಡಿ ಬಾಗಿಲು ತೆರೆಯಲಿದ್ದು, ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವ ಭಕ್ತರಿಗೆ ಸುಗಮ ದರ್ಶನ ಕಲ್ಪಿಸಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
ಗೋಲ್ಡ್ ಪಾಸ್ ಹೊಂದಿರುವ ಭಕ್ತರಿಗೆ ಬೆಳಗ್ಗೆ 8 ಗಂಟೆಯಿಂದ 10 ಗಂಟೆಯವರೆಗೆ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಇನ್ನು ಬೆಳಗ್ಗೆ 10:30ರಿಂದ ಮಧ್ಯಾಹ್ನ 12:30ರವರೆಗೆ ಶಿಷ್ಟಾಚಾರದಡಿ ಬರುವ ಗಣ್ಯರಿಗೆ ದರ್ಶನದ ವ್ಯವಸ್ಥೆ ಕಲ್ಪಿಸಲಾಗಿದೆ. ಭಕ್ತರು ಗಂಟೆಗಟ್ಟಲೆ ಸರದಿಯಲ್ಲಿ ನಿಲ್ಲುವುದನ್ನು ತಪ್ಪಿಸಲು ಹೆಚ್ಚಿನ ಅರ್ಚಕರನ್ನು ನೇಮಿಸಿಕೊಳ್ಳುವಂತೆ ಪ್ರಧಾನ ಅರ್ಚಕರಿಗೆ ಮನವಿ ಮಾಡಲಾಗಿದೆ. ಇದಕ್ಕೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಗರ್ಭಗುಡಿಯ ಬಾಗಿಲನ್ನು ಪದೇಪದೇ ಮುಚ್ಚದೆ ದರ್ಶನಕ್ಕೆ ಅನುಕೂಲ ಮಾಡಿಕೊಡುವ ಭರವಸೆ ನೀಡಿದ್ದಾರೆ ಎಂದು ಸಚಿವರು ತಿಳಿಸಿದರು.
ಹಾಸನಾಂಬ ಜಾತ್ರಾ ಮಹೋತ್ಸವವನ್ನು ನಾಡಹಬ್ಬದ ರೀತಿಯಲ್ಲಿ ಆಚರಿಸಲು ನಗರಸಭೆಯ ವಸ್ತುಪ್ರದರ್ಶನದ ಆವರಣದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮಹಿಳೆಯರು ಮತ್ತು ಪುರುಷರಿಗಾಗಿ ಕುಸ್ತಿ, ಕಬಡ್ಡಿ ಹಾಗೂ ವಾಲಿಬಾಲ್ ಪಂದ್ಯಾವಳಿಗಳನ್ನು ಆಯೋಜಿಸಲಾಗಿದ್ದು, 400ಕ್ಕೂ ಹೆಚ್ಚು ಕುಸ್ತಿಪಟುಗಳು ಭಾಗವಹಿಸುವ ನಿರೀಕ್ಷೆಯಿದೆ.
ಇದರೊಂದಿಗೆ ಹಳ್ಳಿಕಾರ್ ಮತ್ತು ಅಮೃತ್ ಮಹಲ್ ತಳಿಗಳ ಪ್ರದರ್ಶನ, ರಂಗೋಲಿ ಸ್ಪರ್ಧೆ, ಶ್ವಾನ ಪ್ರದರ್ಶನ, ಕೋಲಾಟ ಸೇರಿದಂತೆ ಹಲವು ಸಾಂಸ್ಕೃತಿಕ ಚಟುವಟಿಕೆಗಳು ನಡೆಯಲಿವೆ. ವಿಜೇತರಿಗೆ ಬಹುಮಾನ ವಿತರಿಸಲಾಗುತ್ತದೆ. ಭಕ್ತರಿಗೆ ಉಚಿತ ಪ್ರಸಾದ ವಿತರಿಸುವ ಜವಾಬ್ದಾರಿಯನ್ನು ಇಸ್ಕಾನ್ ವಹಿಸಿಕೊಂಡಿದೆ. ಎರಡು ಲಾಡುಗಳಿಗೆ 56.16 ಪೈಸೆಯಂತೆ ಇಸ್ಕಾನ್ಗೆ ನೀಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ನವೆಂಬರ್ 1ರಿಂದ 6ರೊಳಗೆ ಮುಖ್ಯಮಂತ್ರಿ ದೇವಿ ದರ್ಶನಕ್ಕೆ ಆಗಮಿಸಲಿದ್ದು, ನವೆಂಬರ್ 6ರಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಸನಾಂಬ ದೇವಿಯ ದರ್ಶನ ಪಡೆಯಲಿದ್ದಾರೆ ಎಂದು ತಿಳಿಸಿದರು. ಸ್ಥಳೀಯರಿಗೆ ಪ್ರತ್ಯೇಕ ದರ್ಶನ ವ್ಯವಸ್ಥೆ ಕಲ್ಪಿಸಬೇಕೆಂಬ ಬೇಡಿಕೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ಹಾಸನಾಂಬ ದೇವಿ ಇಡೀ ರಾಜ್ಯದ ಭಕ್ತರ ಆರಾಧ್ಯ ದೈವವಾಗಿದ್ದು, ಎಲ್ಲರೂ ಒಗ್ಗಟ್ಟಿನಿಂದ ಜಾತ್ರೆಯನ್ನು ಯಶಸ್ವಿಗೊಳಿಸಬೇಕು ಎಂದರು.

