ದಾವಣೆಗೆರೆ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ಆಡಳಿತ, ತಾಲೂಕು ಪಂಚಾಯತ್, ನಗರಸಭೆ, ಶಿಕ್ಷಣ ಇಲಾಖೆ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಇದಕ್ಕೆ ವಿವಿಧ ಕನ್ನಡಪರ ಸಂಘಟನೆಗಳು ಕೂಡಾ ಸಾಥ್ ನೀಡಿದ್ದವು. ನಗರದ ಶಿಕ್ಷಕರ ಸಭಾಭವನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ವಿವಿಧ ಶಾಲೆಗಳ ಮಕ್ಕಳು ನಾಡಿನ ಮಹಾನ್ ಗಣ್ಯವ್ಯಕ್ತಿಗಳ ವೇಷಭೂಷಣಗಳನ್ನು ಧರಿಸಿ ಮೆರವಣಿಗೆಯಲ್ಲಿ ಪಾಲ್ಗೊಂಡು ಗಮನ ಸೆಳೆದರು.

ಇದೇ ವೇಳೆ ವಿವಿಧ ಕಲಾತಂಡಗಳ ಕಲಾ ಮೇಳ ಹಾಗೂ ಸಾಂಸ್ಕೃತಿಕ ಕಲಾಪ್ರದರ್ಶನಗಳು ಮೆರವಣಿಗೆಗೆ ವಿಶೇಷ ಮೆರುಗು ನೀಡಿದವು. ನಗರದ ಪೋಸ್ಟ್ ಸರ್ಕಲ್ ಹತ್ತಿರವಿರುವ ಕರ್ನಾಟಕ ವೃತ್ತದಲ್ಲಿ ಕ್ಷೇತ್ರದ ಶಾಸಕ ಪ್ರಕಾಶ ಕೋಳಿವಾಡ ದ್ವಜಾರೋಹಣ ನೆರವೇರಿಸಿ ಮಾತನಾಡಿದರು ನಂತರ ಶಿಕ್ಷಕರ ಭವನದ ವೇದಿಕೆಯ ಮೇಲಿದ್ದ ಗಣ್ಯರು ದೀಪ ಬೆಳಗಿಸುವ ಮೂಲಕ ವೇದಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ತಹಶೀಲ್ದಾರ್ ಆರ್.ಎಚ್.ಭಗವಾನ್ ಮಾತನಾಡಿ, ಕನ್ನಡ ರಾಜ್ಯೋತ್ಸವದ ಇತಿಹಾಸವನ್ನು ವಿವರಿಸಿದರು. 1956ರ ನವೆಂಬರ್ 1ರಂದು ವಿವಿಧ ಪ್ರಾಂತ್ಯಗಳಲ್ಲಿ ಹಂಚಿಹೋಗಿದ್ದ ಕನ್ನಡ ಭಾಷಿಕ ಪ್ರದೇಶಗಳನ್ನು ಒಗ್ಗೂಡಿಸಿ ಮೈಸೂರು ರಾಜ್ಯವನ್ನು ರಚಿಸಲಾಯಿತು. ಕನ್ನಡ ನಾಡಿನ ಏಕೀಕರಣಕ್ಕಾಗಿ ಆಲೂರು ವೆಂಕಟರಾಯರು ಸೇರಿದಂತೆ ಅನೇಕ ಮಹನೀಯರು ಶ್ರಮಿಸಿದ್ದಾರೆ. 1973ರ ನವೆಂಬರ್ 1ರಂದು ಅಂದಿನ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಆಡಳಿತಾವಧಿಯಲ್ಲಿ ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಲಾಯಿತು ಎಂದು ಅವರು ಸ್ಮರಿಸಿದರು.

ನಂತರ ಮತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಶಾಮಸುಂದರ ಅಡಿಗ ಕನ್ನಡ ರಾಜ್ಯೋತ್ಸವವು ಕನ್ನಡಿಗರ ಹೆಮ್ಮೆಯ ನಾಡಹಬ್ಬವಾಗಿದೆ.ರಾಜ್ಯಾದ್ಯಂತ ಕೆಂಪು-ಹಳದಿ ಧ್ವಜಗಳನ್ನು ಹಾರಿಸಿ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಮೆರವಣಿಗೆಗಳ ಮೂಲಕ ಸಂಭ್ರಮದಿಂದ ಆಚರಿಸಲಾಗುತ್ತದೆ. ನಾಡು, ನುಡಿ, ಕಲೆ, ಸಾಹಿತ್ಯ, ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಕರ್ನಾಟಕ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುತ್ತದೆ. ನಾವೆಲ್ಲರೂ ಕನ್ನಡ ಭಾಷೆ, ಕನ್ನಡ ಸಂಸ್ಕೃತಿ ಹಾಗೂ ನಮ್ಮ ನಾಡಿನ ಪರಂಪರೆಯನ್ನು ಉಳಿಸಿ ಬೆಳೆಸಲು ಕೈಜೋಡಿಸಬೇಕು ಎಂದು ಕರೆ ನೀಡಿದರು.

ನಗರಸಭೆ ಪೌರಾಯುಕ್ತ ಫಕೀರಪ್ಪ ಇಂಗಳಗಿ ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟೇಶ್ ಸಣ್ಣಬಿದರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಗಣ್ಯರು ಹಾಗೂ ಕನ್ನಡಪರ ಸಂಘಟನೆಗಳ ಮುಖಂಡರು ಕನ್ನಡ ಭಾಷೆ, ನಾಡು-ನುಡಿ ಮತ್ತು ಸಂಸ್ಕೃತಿಯ ಮಹತ್ವದ ಕುರಿತು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಗಣ್ಯರು, ಅಧಿಕಾರಿಗಳು, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ಪತ್ರಿಕಾ ಮಾಧ್ಯಮದ ಪ್ರತಿನಿಧಿಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಪ್ರಶಸ್ತಿ ಪತ್ರ ನೀಡಿ ಗೌರವಿಸಿ ಸನ್ಮಾನಿಸಲಾಯಿತು.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಹಲವಾರು ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಸೇರಿದಂತೆ ಶಾಲಾ ಶಿಕ್ಷಕರು, ಸಾರ್ವಜನಿಕರು, ಶಾಲಾ ಮಕ್ಕಳು, ಕನ್ನಡಾಭಿಮಾನಿಗಳು, ವಿವಿಧ ಸಂಘಟನೆಗಳ ಮುಖಂಡರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮೆರಗು ನೀಡಿದರು.



