ರಾಜ್ಯ ಸರ್ಕಾರ SIT ರಚಿಸಿ ಅಧಿಕಾರಿಗಳನ್ನು ನೇಮಕ ಮಾಡಿದ್ದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿಯ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, ಇಬ್ಬರು ಅಧಿಕಾರಿಗಳ ಬದಲು ಹೊಸ ಅಧಿಕಾರಿಗಳ ಹೆಸರನ್ನು ಹೈಕೋರ್ಟ್ಗೆ ಸಲ್ಲಿಸಿ ಅಂತಿಮಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
ಸರ್ಕಾರದ ಪರ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದರು. ಎಸ್ ಐಟಿ ಮುಖ್ಯಸ್ಥರಾಗಿರುವ ಅಲೋಕ್ ಕುಮಾರ್ ವಿರುದ್ಧ ಫೋನ್ ಟ್ಯಾಪಿಂಗ್ ಆರೋಪಗಳಿವೆ. ಇದರಿಂದ ಅವರನ್ನು ತಂಡದಿಂದ ಕೈಬಿಡುವಂತೆ ಮನವಿ ಮಾಡಲಾಗಿತ್ತು. ಅಲ್ಲದೆ ಎಸ್ ಐಟಿ ನೇತೃತ್ವಕ್ಕೆ ಐಜಿಪಿ ಶ್ರೇಣಿಯ ಅಧಿಕಾರಿಗಳಾದ ಲಾಭೂರಾಮ್, ಚೇತನ್ ಸಿಂಗ್ ರಾಥೋಡ್ ಸೇರಿದಂತೆ ಐದು ಹೊಸ ಅಧಿಕಾರಿಗಳ ಪಟ್ಟಿಯನ್ನು ನೀಡುತ್ತಿದ್ದೇವೆ ಎಂದು ತಿಳಿಸಿದರು.
ಇದಕ್ಕೆ ಅಭ್ಯರ್ಥಿಗಳ ಪರ ವಕೀಲರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಅಲೋಕ್ ಕುಮಾರ್ ಫೋನ್ ಟ್ಯಾಪಿಂಗ್ ಪ್ರಕರಣದಿಂದ ಈಗಾಗಲೇ ಮುಕ್ತರಾಗಿದ್ದಾರೆ. ಇದೇ ಸರ್ಕಾರ ಅವರಿಗೆ ಡಿಜಿಪಿ ಹುದ್ದೆಗೆ ಬಡ್ತಿ ನೀಡಿದೆ ಜೊತೆಗೆ ರಾಷ್ಟ್ರಪತಿ ಪದಕಕ್ಕೂ ಶಿಫಾರಸು ಮಾಡಿತ್ತು. ಈಗ ಸರ್ಕಾರ ತಮಗೆ ಬೇಕಾದ ಅಧಿಕಾರಿಗಳನ್ನು ತರಲು ಪ್ರಯತ್ನಿಸಲಾಗುತ್ತಿದೆ. ನಮಗೆ ಸರ್ಕಾರದ ಮೇಲೆ ನಂಬಿಕೆಯಿಲ್ಲ, ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಪಟ್ಟುಹಿಡಿದರು.


