ಬಿಜೆಪಿಯ ಹಿರಿಯ ನಾಯಕ ಹಾಗೂ ಭಾರತದ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಕುಟುಂಬದವರು ಅವರನ್ನು ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಶುಕ್ರವಾರ ಸಂಜೆ ಸುಮಾರು 7.30ಕ್ಕೆ ಅವರನ್ನು ಆಸ್ಪತ್ರೆಗೆ ಕರೆತರಲಾಗಿದ್ದು, ಶ್ವಾಸಕೋಶ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾ ಇರಿಸಿದ್ದು, ವಿವಿಧ ವೈದ್ಯಕೀಯ ಪರೀಕ್ಷೆಗಳು ನಡೆಯುತ್ತಿವೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ. 98 ವರ್ಷದ ಅಡ್ವಾಣಿ ಅವರು ಸದ್ಯ ವೈದ್ಯರ ನಿಗಾದಲ್ಲಿದ್ದಾರೆ. 

ಈ ವರ್ಷದ ಮೇ ತಿಂಗಳಲ್ಲಿಯೂ ವಯೋಸಹಜ ಆರೋಗ್ಯ ಸಮಸ್ಯೆಗಳ ಹಿನ್ನೆಲೆಯಲ್ಲಿ ಅಡ್ವಾಣಿ ಅವರುಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಕೆಲವು ದಿನಗಳ ಚಿಕಿತ್ಸೆಯ ಬಳಿಕ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಇದೀಗ ಉಸಿರಾಟ ಸಮಸ್ಯೆ, ಎದೆ ಸೋಂಕಿನ ಕಾರಣಕ್ಕೆ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.