ಬಂಗಾಳಕೊಲ್ಲಿಯಲ್ಲಿ ತೀವ್ರಗೊಂಡಿರುವ ಮುರಸು ಚಂಡಮಾರುತ ಮಂಗಳವಾರ ಬೆಳಗಿನ ಜಾವ ಆಂಧ್ರಪ್ರದೇಶದ ಕರಾವಳಿಗೆ ಅಪ್ಪಳಿಸಿದೆ. ಪ್ರಕಾಶಂ ಜಿಲ್ಲೆಯ ಒಂಗೋಲು ಸಮೀಪ ಬೆಳಗ್ಗೆ ಸುಮಾರು 4 ಗಂಟೆಗೆ ಚಂಡಮಾರುತ ಭೂಭಾಗ ಪ್ರವೇಶಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇದರ ಪರಿಣಾಮ ಆಂಧ್ರಪ್ರದೇಶದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 100ರಿಂದ 120 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.

ಚಂಡಮಾರುತದ ಪರಿಣಾಮ ಸೋಮವಾರ ತಡರಾತ್ರಿಯಿಂದಲೇ ಆಂಧ್ರಪ್ರದೇಶದ ಹಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದೆ. ಮಂಗಳವಾರ ಮುಂಜಾನೆಯವರೆಗೂ ನಿರಂತರವಾಗಿ ಸುರಿದ ಮಳೆಯಿಂದಾಗಿ ನಗರದ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಹಲವು ಕಡೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂದಿನ 12 ಗಂಟೆಗಳ ಕಾಲ ದಕ್ಷಿಣ ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ವಿಶೇಷವಾಗಿ ನೆಲ್ಲೂರು ಮತ್ತು ಪ್ರಕಾಶಂ ಜಿಲ್ಲೆಗಳ ಕರಾವಳಿ ಪ್ರದೇಶಗಳಲ್ಲಿ ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಸಮುದ್ರದಲ್ಲಿ 1ರಿಂದ 1.5 ಮೀಟರ್ ಎತ್ತರದ ಚಂಡಮಾರುತದ ಅಲೆಗಳು ಏಳುವ ಸಾಧ್ಯತೆಯಿದ್ದು, ತಗ್ಗು ಪ್ರದೇಶಗಳಿಗೆ ಸಮುದ್ರದ ನೀರು ನುಗ್ಗುವ ಆತಂಕವೂ ಇದೆ.

ಈ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಯಾವುದೇ ರೀತಿಯ ಜೀವಹಾನಿ ಸಂಭವಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಪರಿಸ್ಥಿತಿಯನ್ನು ನಿರಂತರವಾಗಿ ಗಮನಿಸಬೇಕು ಎಂದು ನಿರ್ದೇಶಿಸಿದ್ದಾರೆ. ನೆಲ್ಲೂರು, ಪ್ರಕಾಶಂ ಮತ್ತು ಕೋತಪಟ್ಟಣಂ ಕರಾವಳಿ ಪ್ರದೇಶಗಳಲ್ಲಿನ ಮಳೆಯ ಪ್ರಮಾಣ ಹಾಗೂ ಗಾಳಿಯ ವೇಗದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.

ಚಂಡಮಾರುತದ ಹಿನ್ನೆಲೆಯಲ್ಲಿ ಕರಾವಳಿ ಭಾಗದ ಜನರು ಎಚ್ಚರಿಕೆಯಿಂದ ಇರುವಂತೆ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆ ಮತ್ತು ಸ್ಥಳೀಯ ಆಡಳಿತದ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.