ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಭಾರತೀಯ ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.

ಸುಪ್ರೀಂ ಕೋರ್ಟ್ ಎಲ್ಲರಿಗೂ ಮುಕ್ತವಾಗಿದೆ ಎಂಬ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿಕೆಯ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಸೋಮವಾರ ನ್ಯಾಯಾಲಯದ ಅರ್ಜಿ ಸ್ವೀಕೃತಿ ಕೌಂಟರ್ ಮುಚ್ಚುವ ಕೆಲವೇ ಕ್ಷಣಗಳ ಮೊದಲು, ರಾಹುಲ್ ಗಾಂಧಿ ಪರ ವಕೀಲರಾದ ಎಸ್. ಪ್ರಸನ್ನ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ.

ಈ ಪ್ರಕರಣವನ್ನು ‘ರಾಹುಲ್ ಗಾಂಧಿ ವರ್ಸಸ್ ಭಾರತೀಯ ಚುನಾವಣಾ ಆಯೋಗ’ ಎಂಬ ಹೆಸರಿನಲ್ಲಿ ದಾಖಲಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಆದರೆ, ಅರ್ಜಿಯಲ್ಲಿ ಮಾಡಲಾಗಿರುವ ನಿರ್ದಿಷ್ಟ ಆರೋಪಗಳು, ನ್ಯಾಯಾಲಯಕ್ಕೆ ಸಲ್ಲಿಸಿರುವ ಮನವಿಗಳು ಹಾಗೂ ರಾಹುಲ್ ಗಾಂಧಿ ಕೋರಿರುವ ಪರಿಹಾರಗಳ ಕುರಿತು ಸಂಪೂರ್ಣ ಮಾಹಿತಿ ಇನ್ನಷ್ಟೇ ಬಹಿರಂಗವಾಗಬೇಕಿದೆ.

ಅರ್ಜಿಯನ್ನು ಖುದ್ದಾಗಿ ಸಲ್ಲಿಸಲು ಅಗತ್ಯವಾದ ಸಮಯಾವಕಾಶ ಪಡೆಯುವ ನಿಟ್ಟಿನಲ್ಲಿ ರಾಹುಲ್ ಗಾಂಧಿ ಕಾನೂನು ತಂಡ ನ್ಯಾಯಾಲಯದ ರಿಜಿಸ್ಟ್ರಿಯನ್ನು ಸಂಪರ್ಕಿಸಿದೆ ಎಂದೂ ವರದಿಯಾಗಿದೆ.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಹಾಗೂ ಮತದಾರರ ಪಟ್ಟಿಯಲ್ಲಿನ ಅಕ್ರಮಗಳ ಆರೋಪಕ್ಕೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸುವ ಉದ್ದೇಶದಿಂದ ಕಾಂಗ್ರೆಸ್ ನಾಯಕರ ನಿಯೋಗಕ್ಕೆ ಸುಪ್ರೀಂ ಕೋರ್ಟ್ ಆವರಣದಲ್ಲಿರುವ ಅರ್ಜಿ ಸಲ್ಲಿಕೆ ಕೌಂಟರ್ಗೆ ತೆರಳಲು ಅನುಮತಿ ನೀಡಲಾಗಿತ್ತು ಎಂದು ಹೇಳಲಾಗಿದೆ. ಈ ನಿಯೋಗದಲ್ಲಿ ಸುಮಾರು 10ರಿಂದ 15 ಕಾಂಗ್ರೆಸ್ ನಾಯಕರು ಭಾಗವಹಿಸಿದ್ದರು ಎನ್ನಲಾಗಿದೆ.

ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ಹೋರಾಟ

ಚುನಾವಣಾ ಆಯೋಗದ ಕಾರ್ಯವೈಖರಿಯನ್ನು ಖಂಡಿಸಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂಡಿಯಾ ಮೈತ್ರಿಕೂಟದ ನಾಯಕರು ಸುಪ್ರೀಂ ಕೋರ್ಟ್‌ವರೆಗೆ ಮೆರವಣಿಗೆ ನಡೆಸಲು ಮುಂದಾಗಿದ್ದರು. ಈ ‘ಚಲೋ ದೆಹಲಿ’ ಕಾರ್ಯಕ್ರಮ ಆರಂಭವಾಗುತ್ತಿದ್ದಂತೆಯೇ ಅರ್ಜಿ ಸಲ್ಲಿಕೆ ಪ್ರಕ್ರಿಯೆಯೂ ನಡೆದಿರುವುದಾಗಿ ಮಾಧ್ಯಮ ವರದಿಗಳು ತಿಳಿಸಿವೆ.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ಮತ್ತು ಚುನಾವಣಾ ಆಯೋಗದ ಕಾರ್ಯವೈಖರಿಯ ಕುರಿತು ರಾಜಕೀಯ ವಲಯದಲ್ಲಿ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಇದೀಗ ರಾಹುಲ್ ಗಾಂಧಿ ಸಲ್ಲಿಸಿರುವ ಅರ್ಜಿಯ ಮುಂದಿನ ವಿಚಾರಣೆ ಹಾಗೂ ಸುಪ್ರೀಂ ಕೋರ್ಟ್‌ನ ನಿಲುವಿನ ಬಗ್ಗೆ ಕುತೂಹಲ ಮೂಡಿದೆ.