ಮಹಾರಾಷ್ಟ್ರದ ಥಾಣೆಯಲ್ಲಿ ಉದ್ಧವ್ ಠಾಕ್ರೆ ಬಣದ ಶಿವಸೇನೆ ನಾಯಕ ಪ್ರದೀಪ್ ಪುರ್ಣೇಕರ್ ನನ್ನು ಇಬ್ಬರು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮಂಗಳವಾರ ರಾತ್ರಿ ಸುಮಾರು 9 ಗಂಟೆ ವೇಳೆಗೆ ಈ ಘಟನೆ ನಡೆದಿದ್ದು, ಸ್ಥಳೀಯವಾಗಿ ಆತಂಕಕ್ಕೆ ಕಾರಣವಾಗಿದೆ.

ಪ್ರದೀಪ್ ಪುರ್ಣೇಕರ್ ಮಾನಪಾಡ ಉಪವಿಭಾಗದ ಮುಖ್ಯಸ್ಥರಾಗಿದ್ದರು. ಪ್ರಾಥಮಿಕ ಮಾಹಿತಿಯ ಪ್ರಕಾರ, ಅವರು ಮಾನಪಾಡದಲ್ಲಿರುವ ತಮ್ಮ ಕಚೇರಿಯಲ್ಲಿ ಇದ್ದ ವೇಳೆ ಇಬ್ಬರು ಅಪರಿಚಿತ ವ್ಯಕ್ತಿಗಳು ಅಲ್ಲಿಗೆ ಆಗಮಿಸಿದ್ದಾರೆ. ಮೊದಲಿಗೆ ಅವರ ಮೇಲೆ ಹಲ್ಲೆ ನಡೆಸಿದ ಬಳಿಕ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡ ಪ್ರದೀಪ್ ನನ್ನು ಕೂಡಲೇ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯರು ತುರ್ತು ಚಿಕಿತ್ಸೆ ನೀಡಿದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಘಟನೆ ಥಾಣೆಯ ಕಪುರ್ಬಾವಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಹತ್ಯೆ ನಡೆಸಿದ ದುಷ್ಕರ್ಮಿಗಳ ಪತ್ತೆಗಾಗಿ ಪೊಲೀಸರು ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಇದಲ್ಲದೆ, ಆರೋಪಿಗಳು ನಗರದಿಂದ ಪರಾರಿಯಾಗದಂತೆ ಥಾಣೆಯ ಪ್ರಮುಖ ನಿರ್ಗಮನ ಮಾರ್ಗಗಳಲ್ಲಿ ಚೆಕ್ಪೋಸ್ಟ್ಗಳನ್ನು ಸ್ಥಾಪಿಸಿ ತಪಾಸಣೆ ನಡೆಸಲಾಗುತ್ತಿದೆ.

ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ತಜ್ಞರ ತಂಡವೂ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಗುಂಡಿನ ದಾಳಿ ನಡೆದ ಸ್ಥಳದಿಂದ ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಲಾಗುತ್ತಿದೆ. ಪ್ರಸ್ತುತ ಹತ್ಯೆಯ ಹಿಂದಿನ ನಿಖರ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ವೈಯಕ್ತಿಕ ದ್ವೇಷ, ರಾಜಕೀಯ ಕಾರಣ ಅಥವಾ ಇತರ ಯಾವುದೇ ವಿಚಾರ ಹತ್ಯೆಗೆ ಕಾರಣವಾಗಿದೆಯೇ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇಬ್ಬರು ಅಪರಿಚಿತ ಆರೋಪಿಗಳ ಗುರುತು ಹಾಗೂ ಅವರ ಉದ್ದೇಶದ ಬಗ್ಗೆ ತನಿಖೆ ಮುಂದುವರಿದಿದ್ದು, ಸಿಸಿಟಿವಿ ದೃಶ್ಯಗಳು ಮತ್ತು ಇತರ ಸಾಕ್ಷ್ಯಗಳ ಆಧಾರದ ಮೇಲೆ ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.