ಕರ್ನಾಟಕದಲ್ಲಿ ಸುಮಾರು ನಾಲ್ಕು ತಿಂಗಳ ಕಾಲ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಮಂಗಳವಾರ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಿದೆ. ಇದರಿಂದ ಕರಡು ಪಟ್ಟಿಯಲ್ಲಿದ್ದ ಎಷ್ಟು ಹೆಸರುಗಳು ರದ್ದಾಗಲಿವೆ ಹಾಗೂ ಹೊಸದಾಗಿ ಎಷ್ಟು ಮತದಾರರ ಹೆಸರು ಸೇರ್ಪಡೆಯಾಗಲಿದೆ ಎಂಬ ಕುತೂಹಲ ಹೆಚ್ಚಾಗಿದೆ.

ಮಧ್ಯಾಹ್ನ 3 ಗಂಟೆಗೆ ಅಂತಿಮ ಪಟ್ಟಿ ಪ್ರಕಟ

ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಹಕ್ಕುಗಳು, ಆಕ್ಷೇಪಣೆಗಳು ಹಾಗೂ ನೋಟಿಸ್ಗಳ ವಿಲೇವಾರಿ ಪ್ರಕ್ರಿಯೆ ಅಕ್ಟೋಬರ್ 22ರಂದು ಪೂರ್ಣಗೊಂಡಿದೆ. ಮಂಗಳವಾರ ಮಧ್ಯಾಹ್ನ 3 ಗಂಟೆಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಿದ್ದಾರೆ.

ಕರಡು ಮತದಾರರ ಪಟ್ಟಿಯಲ್ಲಿ ಸುಮಾರು 4.50 ಕೋಟಿ ಮತದಾರರಿದ್ದರು. ಈ ಪೈಕಿ ನೋ ಮ್ಯಾಪಿಂಗ್ ಮತ್ತು ತಾರ್ಕಿಕ ವ್ಯತ್ಯಾಸಗಳ ಕಾರಣಕ್ಕೆ 43.82 ಲಕ್ಷ ಮತದಾರರಿಗೆ ನೋಟಿಸ್ ನೀಡಲಾಗಿತ್ತು. ಸಂಬಂಧಪಟ್ಟ ಮತದಾರರಿಗೆ ನೋಟಿಸ್ ತಲುಪಿಸಿ ವಿಚಾರಣೆ ನಡೆಸಲಾಗಿದೆ. ಇದೀಗ ಪರಿಷ್ಕರಣೆ ಪ್ರಕ್ರಿಯೆ ಪೂರ್ಣಗೊಂಡಿರುವುದರಿಂದ ಅಂತಿಮ ಪಟ್ಟಿಯಲ್ಲಿ ಮತದಾರರ ಸಂಖ್ಯೆಯಲ್ಲಿ ಆಗಿರುವ ಬದಲಾವಣೆಗಳ ವಿವರ ಲಭ್ಯವಾಗಲಿದೆ.

ಅಂತಿಮ ಮತದಾರರ ಪಟ್ಟಿ ಪ್ರಕಟವಾದ ಬಳಿಕ ಎಷ್ಟು ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ, ಎಷ್ಟು ಹೊಸ ಹೆಸರುಗಳನ್ನು ಸೇರಿಸಲಾಗಿದೆ ಹಾಗೂ ರಾಜ್ಯದ ಒಟ್ಟು ಮತದಾರರ ಸಂಖ್ಯೆ ಎಷ್ಟಾಗಿದೆ ಎಂಬುದು ಸ್ಪಷ್ಟವಾಗಲಿದೆ. ಮತದಾರರು ತಮ್ಮ ಹೆಸರು ಅಂತಿಮ ಪಟ್ಟಿಯಲ್ಲಿ ಇರುವುದನ್ನು ಪರಿಶೀಲಿಸುವುದು ಮುಖ್ಯವಾಗಿದೆ. ಮತದಾರರ ಪಟ್ಟಿಯಲ್ಲಿನ ಹೆಸರು ಮತ್ತು ವಿವರಗಳನ್ನು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗದ ಅಧಿಕೃತ ವೆಬ್ಸೈಟ್ ಅಥವಾ ಸಂಬಂಧಪಟ್ಟ ಚುನಾವಣಾ ಅಧಿಕಾರಿಗಳನ್ನು ಸಂಪರ್ಕಿಸಬಹುದು.