ಪ್ರಕರಣದ ಪ್ರಮುಖ ಆರೋಪಿ ಎನ್ನಲಾಗಿರುವ ಶಬ್ಬೀರ್ ಹಾಗೂ ಟೆಲಿಗ್ರಾಂ ಗ್ರೂಪ್ನ ಅಡ್ಮಿನ್ ಸಲಾಮಿನ್ ಅಲಿಯಾಸ್ ಸಲ್ಮಾನ್ ಬಂಧಿತರು. ಕಳೆದ ನಾಲ್ಕು ತಿಂಗಳಿನಿಂದ ಆರೋಪಿಗಳ ಚಲನವಲನಗಳ ಮೇಲೆ ಗುಪ್ತಚರ ಇಲಾಖೆ ನಿಗಾ ಇರಿಸಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸುಮಾರು ಒಂದು ವಾರದ ಹಿಂದೆ ಶಬ್ಬೀರ್ನನ್ನು ವಶಕ್ಕೆ ಪಡೆದು ಪ್ರಾಥಮಿಕ ವಿಚಾರಣೆ ನಡೆಸಲಾಗಿತ್ತು.
ವಿಚಾರಣೆ ವೇಳೆ ಪ್ರಕರಣಕ್ಕೆ ಸಂಬಂಧಿಸಿದ ಕೆಲವು ಮಹತ್ವದ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಶಬ್ಬೀರ್ನನ್ನು ಚಿಕ್ಕಬಳ್ಳಾಪುರ ನಗರ ಪೊಲೀಸರ ವಶಕ್ಕೆ ಒಪ್ಪಿಸಲಾಗಿತ್ತು. ಪೊಲೀಸರು ಹೆಚ್ಚಿನ ವಿಚಾರಣೆ ನಡೆಸಿದಾಗ ಟೆಲಿಗ್ರಾಂ ಗ್ರೂಪ್ನ ಅಡ್ಮಿನ್ ಸಲಾಮಿನ್ ಅಲಿಯಾಸ್ ಸಲ್ಮಾನ್ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ತಿಳಿದುಬಂದಿದೆ.
ಹಾಸನದಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಸಲ್ಮಾನ್
ಸಲಾಮಿನ್ ಅಲಿಯಾಸ್ ಸಲ್ಮಾನ್ ಮೂಲತಃ ಉತ್ತರ ಪ್ರದೇಶದವನಾಗಿದ್ದು, ಹಾಸನದಲ್ಲಿ ವಾಸವಾಗಿದ್ದ. ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಶಬ್ಬೀರ್ ನೀಡಿದ ಮಾಹಿತಿಯ ಆಧಾರದ ಮೇಲೆ ಆತನನ್ನು ಪೊಲೀಸರು ಬಂಧಿಸಿದ್ದಾರೆ.
ಟೆಲಿಗ್ರಾಂ ಗ್ರೂಪ್ನಲ್ಲಿ ಪ್ರಚೋದನಕಾರಿ ಚರ್ಚೆ ಆರೋಪ
ಆರೋಪಿಗಳು ಸಕ್ರಿಯವಾಗಿದ್ದ ಟೆಲಿಗ್ರಾಂ ಗ್ರೂಪ್ನಲ್ಲಿ ಧಾರ್ಮಿಕ ವಿಚಾರಗಳಿಗೆ ಸಂಬಂಧಿಸಿದ ಚರ್ಚೆಗಳು ನಡೆಯುತ್ತಿದ್ದವು ಎನ್ನಲಾಗಿದೆ. ದೇಶದ ವಿವಿಧೆಡೆ ಮಸೀದಿಗಳನ್ನು ಕೆಡವಲಾಗಿದೆ ಹಾಗೂ ಮುಸ್ಲಿಮರ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂಬ ವಿಚಾರಗಳನ್ನು ಮುಂದಿಟ್ಟುಕೊಂಡು ಪ್ರಚೋದನಕಾರಿ ಚರ್ಚೆಗಳು ನಡೆದಿದ್ದವು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
ಸದ್ಯದ ತನಿಖೆಯಲ್ಲಿ ರಾಜ್ಯದ ಯಾವುದೇ ರಾಜಕೀಯ ನಾಯಕರನ್ನು ಗುರಿಯಾಗಿಸಿಕೊಂಡು ಚರ್ಚೆ ನಡೆಸಿರುವುದು ಅಥವಾ ನಿರ್ದಿಷ್ಟ ನಾಯಕರ ಹೆಸರುಗಳನ್ನು ಉಲ್ಲೇಖಿಸಿರುವ ಬಗ್ಗೆ ಯಾವುದೇ ಕುರುಹು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 113ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಭಯೋತ್ಪಾದನಾ ಕೃತ್ಯಕ್ಕೆ ಸಂಬಂಧಿಸಿದ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಇನ್ನು ಟೆಲಿಗ್ರಾಂ ಗ್ರೂಪ್ನಲ್ಲಿದ್ದ ಇತರ ಆರು ಮಂದಿಯ ಬಗ್ಗೆಯೂ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಆರೋಪಿಗಳ ಮೊಬೈಲ್ ಫೋನ್ಗಳು ಸೇರಿದಂತೆ ಲಭ್ಯವಿರುವ ಡಿಜಿಟಲ್ ಸಾಧನಗಳ ಪರಿಶೀಲನೆ ನಡೆಸಲಾಗುತ್ತಿದ್ದು, ಡಿಜಿಟಲ್ ಸಾಕ್ಷ್ಯಾಧಾರಗಳ ಆಧಾರದ ಮೇಲೆ ತನಿಖೆಯನ್ನು ಮುಂದುವರಿಸಲಾಗುತ್ತಿದೆ.
ತನಿಖೆಯ ವೇಳೆ ಗ್ರೂಪ್ನ ಇತರ ಸದಸ್ಯರ ಪಾತ್ರ, ಅವರ ನಡುವಿನ ಸಂವಹನ ಹಾಗೂ ಯಾವುದೇ ವಿಧ್ವಂಸಕ ಕೃತ್ಯಕ್ಕೆ ಸಂಬಂಧಿಸಿದ ಯೋಜನೆ ರೂಪಿಸಲಾಗಿತ್ತೇ ಎಂಬ ಅಂಶಗಳ ಬಗ್ಗೆ ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕಲಿದ್ದಾರೆ.



