ಹಾಸನದ ಹಾಸನಾಂಬೆ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ತಮ್ಮ ರಾಜಕೀಯ ಎದುರಾಳಿಗಳನ್ನು ಹತ್ತಿಕ್ಕಲು ಮತ್ತು ಕುಮಾರಸ್ವಾಮಿ ಅವರ ಜನಪ್ರಿಯತೆಗೆ ಧಕ್ಕೆ ತರಲು ಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕಾಗಿ ಪೊಲೀಸ್ ಇಲಾಖೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು. ಅಲ್ಲದೇ ಕಾಂಗ್ರೆಸ್ ನಾಯಕರು ತಮ್ಮ ರಾಜಕೀಯ ವಿರೋಧಿಗಳನ್ನು ಗುರಿಯಾಗಿಸಲು ಪೊಲೀಸ್ ಇಲಾಖೆಯನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಪ್ರಮುಖ ವಿಚಾರಗಳಲ್ಲಿ ಸರ್ಕಾರದ ಹಸ್ತಕ್ಷೇಪದಿಂದಾಗಿ ಇಲಾಖೆಯ ನೈತಿಕ ಸ್ಥೈರ್ಯವೇ ಕುಗ್ಗಿ ಹೋಗಿದೆ ಎಂದು ಸೋಮಣ್ಣ ದೂರಿದರು.
ಬೆಂಗಳೂರು-ಮಂಗಳೂರು ನಡುವಿನ ವಂದೇ ಭಾರತ್ ರೈಲು ಸಂಚಾರದ ಬಗ್ಗೆ ಇದೇ ವೇಳೆ ಸಚಿವರು ಪ್ರಸ್ತಾಪ ಮಾಡಿದರು. ನೈರುತ್ಯ ರೈಲ್ವೆ ವಿದ್ಯುದೀಕರಣ ಕಾಮಗಾರಿ ಪೂರ್ಣಗೊಳಿಸಿದ ಕೂಡಲೇ ರೈಲು ಸಂಚಾರ ಆರಂಭವಾಗಲಿದೆ ಎಂದು ಹೇಳಿದರು. ಅಲ್ಲದೇ ತಾವು ರೈಲ್ವೆ ಸಚಿವರಾದ ಬಳಿಕ ಕರ್ನಾಟಕದಲ್ಲಿ 52,000 ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳನ್ನು ಕೇಂದ್ರ ಸರ್ಕಾರ ಕೈಗೆತ್ತಿಕೊಂಡಿದೆ ಎಂದು ತಿಳಿಸಿದರು. ಅಲ್ಲದೆ, 50,000 ಕೋಟಿ ರೂಪಾಯಿ ಮೊತ್ತದ ಯೋಜನೆಗಳು ಮತ್ತು ಕಾಮಗಾರಿಗಳ ಪ್ರಸ್ತಾವನೆ ಕೇಂದ್ರದ ಮುಂದಿದ್ದು, ಅವುಗಳಿಗೆ ಶೀಘ್ರ ಅನುಮೋದನೆ ದೊರೆಯುವಂತೆ ಕ್ರಮ ಕೈಗೊಳ್ಳಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರ್ನಾಟಕದ ಬಗ್ಗೆ ವಿಶೇಷ ಕಾಳಜಿ ಇದೆ ಎಂದು ಹೇಳಿದರು.
ಇನ್ನು ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರ ಆಧಾರರಹಿತ ಹೇಳಿಕೆಗಳನ್ನು ನೀಡುತ್ತಿದೆ ಎಂದ ಅವರು ಕೇಂದ್ರ ಯಾವುದೇ ರಾಜ್ಯದ ವಿಚಾರದಲ್ಲಿ ತಾರತಮ್ಯ ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದರು. ಬರ ಪರಿಸ್ಥಿತಿ ಎದುರಿಸಲು ಕರ್ನಾಟಕಕ್ಕೆ ಕೇಂದ್ರ ಸರ್ಕಾರ 4,500 ಕೋಟಿ ರೂಪಾಯಿಗಳಿಗೂ ಅಧಿಕ ಅನುದಾನ ಬಿಡುಗಡೆ ಮಾಡಿದೆ ಎಂದು ತಿಳಿಸಿದರು. ಹಾಲು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ಕಾಂಗ್ರೆಸ್ ಸರ್ಕಾರಕ್ಕೆ ಜನರು ಹಿಡಿಶಾಪ ಹಾಕುತ್ತಿದ್ದಾರೆ. 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸಲು ಜನರು ಕಾಯುತ್ತಿದ್ದಾರೆ ಎಂದು ಸೋಮಣ್ಣ ಗುಡುಗಿದರು. ಇದೇ ವೇಳೆ ಮಾಜಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಕೆ.ಎಸ್. ಈಶ್ವರಪ್ಪ ಇಬ್ಬರನ್ನೂ ಬಿಜೆಪಿಗೆ ಮರಳಿ ಸೇರಿಸಿಕೊಳ್ಳುವ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದರು.


